Namma Metro: ಬೆಂಗಳೂರಿನ (Bangalore) ಹೊರವಲಯದ ನಾಲ್ಕು ನಗರಗಳಿಗೆ ನಮ್ಮ ಮೆಟ್ರೋ (Namma Metro) ಸಂಪರ್ಕ ಕಲ್ಪಿಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ (Congress Government) ಚಿಂತನೆ ನಡೆಸುತ್ತಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DCM DK Shivakumar) ಹಾಗೂ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಶಾಸಕರು ಚರ್ಚೆ ನಡೆಸಿದರು.

ಬೆಂಗಳೂರು ಗ್ರಾಮಾಂತರ ಶಾಸಕರ ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕರೊಬ್ಬರು ಈ ವಿಷಯ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬೆಂಗಳೂರು ನಗರ ಮತ್ತು ಪಟ್ಟಣಗಳ ನಡುವಿನ ಸಂಪರ್ಕವನ್ನು ಸುಧಾರಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಪಟ್ಟಣಗಳಿಗೆ ಮೆಟ್ರೋ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದೇವೆ.ಇದರಿಂದ ಪಟ್ಟಣಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಇದರಿಂದ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆಯಾಗುತ್ತದೆ’ ಎಂದು ಮತ್ತೊಬ್ಬ ಶಾಸಕರು ಹೇಳಿದರು.

ನಮ್ಮ ಮೆಟ್ರೋವನ್ನು ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ ಪಟ್ಟಣಗಳಿಗೂ ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ. 2ಎ ಮತ್ತು 2ಬಿ ಹಂತಗಳಲ್ಲಿ ನಡೆಯುತ್ತಿರುವ ಮೆಟ್ರೋ ಯೋಜನೆಯು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಬೆಂಗಳೂರು ಉಪನಗರಗಳಿಗೆ ಸಂಪರ್ಕ ಕಲ್ಪಿಸಲಿದೆ ಎಂದು ಅಧಿಕಾರಿಗಳು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.